ಕೊರಗಜ್ಜನ ಕಟ್ಟೆಯ ಕಾಣಿಕೆ ಡಬ್ಬಿಯಲ್ಲಿ ಬಳಸಿದ ಕಾಂಡೊಮ್ ಪತ್ತೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
Tuesday, December 28, 2021
ಮಂಗಳೂರು: ನಗರದ ಮಾರ್ನಮಿಕಟ್ಟೆಯ ಬಳಿಯಿರುವ ಶ್ರೀ ಕೊರಗಜ್ಜನ ಕಟ್ಟೆಯ ಕಾಣಿಕೆ ಡಬ್ಬಿಯೊಳಗೆ ಉಪಯೋಗಿಸಿರುವ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿರುವ ಬಗ್ಗೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ಶೀಘ್ರ ಬಂಧಿಸುವಂತೆ ಶಾಸಕ ವೇದವ್ಯಾಸ ಕಾಮತ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಇಂದು ಬೆಳಗ್ಗೆ ಡಬ್ಬಿಯೊಳಗಡೆ ಕಾಂಡೋಮ್ ಪತ್ತೆಯಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳದಲ್ಲಿ ಭಕ್ತರು ಜಮಾಯಿಸಿದ್ದು, ತಕ್ಷಣ ಆರೋಪಿಗಳನ್ನು ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಸ್ಥಳಕ್ಕೆ ಪಾಂಡೇಶ್ವರ ಪೋಲೀಸರು ಆಗಮಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಘಟನೆಯನ್ನು ಖಂಡಿಸಿರುವ ಮಂಗಳೂರು ಶಾಸಕ ವೇದವ್ಯಾಸ ಕಾಮತ್ 'ಘಟನೆ ಬಗ್ಗೆ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸಿ ಶಾಂತಿಯಿಂದಿರುವ ಜಿಲ್ಲೆಯಲ್ಲಿ ಇಂತಹ ಕೃತ್ಯಗಳ ಮೂಲಕ ಕೋಮುಗಲಭೆಗೆ ಪ್ರಚೋದಿಸುವ ಶಕ್ತಿಗಳನ್ನು ಮಟ್ಟಹಾಕುವಂತೆ ಪೊಲೀಸ್ ಇಲಾಖೆ ಸೂಚಿಸಿದ್ದೇನೆ' ಎಂದು ತಿಳಿಸಿದ್ದಾರೆ