ಮಂಗಳೂರು ಏರ್‌ಪೋರ್ಟ್ ನಲ್ಲಿ ಬಾಂಬ್ ಇರಿಸಿದ್ದ ಆರೋಪ ಸಾಬೀತು: ಆರೋಪಿ ಆದಿತ್ಯ ರಾವ್ ಗೆ 20 ವರ್ಷ ಕಾರಾಗೃಹ ಶಿಕ್ಷೆ
Wednesday, March 16, 2022
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ ಮೇಲಿನ ಆರೋಪ ಸಾಬೀತಾಗಿದ್ದು ಈ ಹಿನ್ನೆಲೆಯಲ್ಲಿ 20 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ನಾಲ್ಕನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ತೀರ್ಪು ವಿಧಿಸಿದೆ.
ಸ್ಫೋಟಕ ವಸ್ತುಗಳ ಕಾಯ್ದೆ 1908ರ ಸೆಕ್ಷನ್ 4ರ ಅನ್ವಯ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10,000 ರೂಪಾಯಿ ದಂಡ, ದಂಡ ತೆರಲು ಸಾಧ್ಯವಾಗದಿದ್ದಲ್ಲಿ ಹೆಚ್ಚುವರಿ 6 ತಿಂಗಳ ಸಾದಾ ಜೈಲು ಶಿಕ್ಷೆ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ 1967ರ ಸೆಕ್ಷನ್ 16ರ ಅನ್ವಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10,000 ರೂ. ದಂಡ, ದಂಡ ತೆರಲು ಸಾಧ್ಯವಾಗದಿದ್ದಲ್ಲಿ ಹೆಚ್ಚುವರಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ಜಿಲ್ಲಾ ನಾಲ್ಕನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ.ಆರ್.ಪಲ್ಲವಿ ತೀರ್ಪು ವಿಧಿಸಿ ಆದೇಶ ಹೊರಡಿಸಿದ್ದಾರೆ. ಅಪರಾಧಿ ಈ ಎರಡೂ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸಬೇಕು ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.
ಉಡುಪಿ ಜಿಲ್ಲೆಯ ಮಣಿಪಾಲ ಮೂಲದ ಆದಿತ್ಯ ರಾವ್ ಮೆಕ್ಯಾನಿಕಲ್ ಇಂಜಿನಿಯರ್ ಪದವೀಧರನಾಗಿದ್ದ.2018ರಲ್ಲಿ ಬೆಂಗಳೂರು ಏರ್ ಪೋರ್ಟ್ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದ.ಆದರೆ ಸೂಕ್ತ ದಾಖಲೆಗಳು ಇಲ್ಲದ ಕಾರಣ ಅರ್ಜಿ ತಿರಸ್ಕೃತಗೊಂಡಿತ್ತು.ತನ್ನ ಅರ್ಜಿ ತಿರಸ್ಕೃತವಾಗಿದ್ದಕ್ಕೆ ಆದಿತ್ಯ ರಾವ್ಗೆ ಆಕ್ರೋಶವಿತ್ತು.ಹೀಗಾಗಿ ಅನೇಕ ಬಾರಿ ಏರ್ ಪೋರ್ಟ್ ಗೆ ಹುಸಿ ಬಾಂಬ್ ಕರೆ ಮಾಡಿದ್ದ.ಬಳಿಕ ಮಂಗಳೂರು ಏರ್ ಪೋರ್ಟ್ ಗೆ ಬಾಂಬ್ ಇಟ್ಟಿದ್ದು ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು.
2020ರ ಜನವರಿ 20ರಂದು ಬೆಳಗ್ಗೆ 9 ಗಂಟೆ ಹೊತ್ತಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಆದಿತ್ಯ ರಾವ್ ಸ್ಪೋಟಕ ಸಾಮಾಗ್ರಿಗಳನ್ನು ಇರಿಸಿದ್ದ. ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಶಂಕಾಸ್ಪದ ಸ್ಪೋಟಕ ಸಾಮಾಗ್ರಿಗನ್ನು ಅಂದೇ ವಿಮಾನ ನಿಲ್ದಾಣ ಸಮೀಪದ ಕೆಂಜಾರು ಎಂಬಲ್ಲಿ ನಿಷ್ಕ್ರಿಯಗೊಳಿಸಲಾಗಿತ್ತು. ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸುತ್ತಿದ್ದಂತೆ ಆದಿತ್ಯ ರಾವ್ 2020ರ ಜ.22ರಂದು ತಾನೇ ಬಾಂಬ್ ಇರಿಸಿರುವುದಾಗಿ ಬೆಂಗಳೂರಿನ ರಾಜ್ಯ ಮಹಾನಿರ್ದೇಶಕರ ಮುಂದೆ ಶರಣಾಗಿದ್ದ