CBI ತನಿಖೆ ಆದೇಶ ಹಿಂಪಡೆದ ಪ್ರಕರಣ: ರಾಜ್ಯ ಸರ್ಕಾರ, ಡಿಕೆ ಶಿವಕುಮಾರ್‌ಗೆ ಸುಪ್ರೀಂಕೋರ್ಟ್ ನೋಟಿಸ್
Friday, November 8, 2024
ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಡಿಕೆಶಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಶಿವಕುಮಾರ್‌ಗೆ ಸುಪ್ರೀಂಕೋರ್ಟ್ ಶುಕ್ರವಾರ ಪ್ರತಿಕ್ರಿಯೆ ಕೋರಿ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು ಸೋಮವಾರ ಅರ್ಜಿಯ ವಿಚಾರಣೆ ನಡೆಸಿ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.
ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ 2019ರಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. 2023ರ ನ. 23ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಕಾನೂನು ಬದ್ಧವಾಗಿಲ್ಲ ಎಂದು ಸಿಬಿಐಗೆ ನೀಡಿದ್ದ ತನಿಖಾ ಅನುಮತಿಯನ್ನು ಹಿಂಪಡೆದಿತ್ತು.
ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಕರ್ನಾಟಕ ಹೈಕೋರ್ಟ್ ಈ ಅರ್ಜಿಗಳನ್ನು ತಮ್ಮ ವ್ಯಾಪ್ತಿಗೆ ಬರಲ್ಲ ಎಂದು ವಜಾಗೊಳಿಸಿತ್ತು. ನಂತರ ಯತ್ನಾಳ್, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಸೆ. 17ರಂದು ಇದೇ ಪೀಠವು ರಾಜ್ಯ ಸರ್ಕಾರ ಹಾಗೂ ಡಿ.ಕೆ. ಶಿವಕುಮಾರ್‌ಗೆ ನೋಟಿಸ್ ಜಾರಿ ಮಾಡಿತ್ತು.
ಶಿವಕುಮಾರ್ ಅವರು 2013 ಮತ್ತು 2018ರ ನಡುವೆ ಆದಾಯ ಮೀರಿದ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಈ ಅವಧಿಯಲ್ಲಿ ಡಿಕೆಶಿ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. 2019ರ ಸೆಪ್ಟೆಂಬರ್ 25 ರಂದು ಬಿಜೆಪಿ ಸರ್ಕಾರವು ವಿಚಾರಣೆ ನಡೆಸಲು ನೀಡದ ಅನುಮತಿಯ ಆಧಾರದ ಮೇಲೆ ಸಿಬಿಐ 2020 ಅಕ್ಟೋಬರ್ 3 ರಂದು ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ (ಡಿಎ) ಕೇಸ್ ದಾಖಲಿಸಿತ್ತು.