ನೆಲಮಂಗಲ: ಡಿವೈಡರ್ ದಾಟಿ KSRTC ಬಸ್ಗೆ ಕಾರು ಡಿಕ್ಕಿ; ಐವರು ಯುವಕರು ಸಾವು...!!!
ನೆಲಮಂಗಲ: ಹೊಸಕೋಟೆಯಲ್ಲಿ ಎರಡು ದಿನಗಳ ಹಿಂದೆ ನಡೆದ ಭೀಕರ ಅಪಘಾತದ ಆಘಾತ ಮಾಸುವ ಮುನ್ನವೇ ನೆಲಮಂಗಲದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಅತಿವೇಗದಲ್ಲಿ ಚಲಿಸುತ್ತಿದ್ದ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಎದುರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಗುದ್ದಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಯುವಕರು ಸಾವನ್ನಪ್ಪಿದ್ದಾರೆ.
ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಜಿಂದಾಲ್ ಬಳಿಯ ಫ್ಲೇಓವರ್ ಮೇಲೆ ಶನಿವಾರ ರಾತ್ರಿ 12 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ತುಮಕೂರು ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಗುದ್ದಿದ್ದು, ಬಳಿಕ ಅಲ್ಲಿಂದ ಹಾರಿ ಬೆಂಗಳೂರಿನಿಂದ ಹುಬ್ಬಳಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಯುವಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಬಸ್ನ ಮುಂಭಾಗವೂ ಜಖಂ ಆಗಿದೆ. ಬಸ್ನಲ್ಲಿದ್ದ 43 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಮೃತ ಯುವಕರಲ್ಲಿ ಲಿಖಿತ್, ಹರ್ಷಿತ್ ಗುರುತು ಪತ್ತೆಯಾಗಿದ್ದು, ಇನ್ನುಳಿದ ಮೂವರು ಯುವಕರು ಗುರುತು ಪತ್ತೆ ಮಾಡಲಾಗುತ್ತಿದೆ. ಹರ್ಷಿತ್ ದೊಡ್ಡಬಳ್ಳಾಪುರ ಮೂಲದ ಯುವಕನಾಗಿದ್ದು, ರಾಜಾನುಕುಂಟೆ ಬಳಿಯ ಸಾಯಿ ಕಾಲೇಜು ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ.
ನಿನ್ನೆ ಸ್ನೇಹಿತರೆಲ್ಲರೂ ಜೊತೆಯಾಗಿ ಕಾರಿನಲ್ಲಿ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಯುವಕರ ಅತಿವೇಗವೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.