ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಕಿಡ್ನಾಪ್‌ಗೆ ಯತ್ನ; ಚೂರಿಯಿಂದ ಹಲ್ಲೆ!!!
Sunday, February 8, 2026
ಬೆಳ್ತಂಗಡಿ, ದಕ್ಷಿಣ ಕನ್ನಡ:
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಇಂದು ಬೆಳಿಗ್ಗೆ ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಅಪಹರಣಕ್ಕೆ ವಿಫಲ ಯತ್ನ ನಡೆದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಎಂದಿನಂತೆ ತನ್ನ ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದಾಗ, ಮಾರ್ಗಮಧ್ಯೆ ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ.ಇಕೋ (ECO) ಕಾರಿನಲ್ಲಿ ಬಂದ ಮೂವರು ಮಾಸ್ಕ್ ಧಾರಿ ವ್ಯಕ್ತಿಗಳು ವಿದ್ಯಾರ್ಥಿನಿಯ ಸ್ಕೂಟಿಯನ್ನು ತಡೆದಿದ್ದಾರೆ.ವಿದ್ಯಾರ್ಥಿನಿಗೆ ಚೂರಿ ತೋರಿಸಿ ಹೆದರಿಸಿದ ಆರೋಪಿಗಳು, ಬಲವಂತವಾಗಿ ಕಾರಿನೊಳಗೆ ಎಳೆದು ಹಾಕಲು ಯತ್ನಿಸಿದ್ದಾರೆ.
ಈ ಸಂದರ್ಭದಲ್ಲಿ ವಿದ್ಯಾರ್ಥಿನಿ ಕಿರುಚಾಡಿ ಪ್ರತಿರೋಧ ಒಡ್ಡಿದ್ದಾಳೆ. ಇದರಿಂದ ಆಕ್ರೋಶಗೊಂಡ ದುಷ್ಕರ್ಮಿಗಳು ಚೂರಿಯಿಂದ ವಿದ್ಯಾರ್ಥಿನಿಯ ಕೈಗೆ ಗಾಯಗೊಳಿಸಿದ್ದಾರೆ.
ವಿದ್ಯಾರ್ಥಿನಿ ಕಿರುಚಾಡುತ್ತಿದ್ದಾಗ ಅದೇ ರಸ್ತೆಯಲ್ಲಿ ಹಿಂದಿನಿಂದ ಬರುತ್ತಿದ್ದ ಅಬ್ಬುಸಾಲಿ ಎಂಬುವವರು ಇದನ್ನು ಗಮನಿಸಿದ್ದಾರೆ. ಕೂಡಲೇ ಅವರು ಸ್ಥಳಕ್ಕೆ ಧಾವಿಸುವುದನ್ನು ಕಂಡ ಅಪಹರಣಕಾರರು ಭೀತಿಯಿಂದ ಕಾರಿನಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ.
ಅಬ್ಬುಸಾಲಿ ಅವರು ತಕ್ಷಣ ಗಾಯಗೊಂಡ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ವಿದ್ಯಾರ್ಥಿನಿಯ ಹೇಳಿಕೆ ಪಡೆಯಲಾಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಇಕೋ ಕಾರು ಮತ್ತು ಮಾಸ್ಕ್ ಧಾರಿಗಳ ಪತ್ತೆಗೆ ಬಲೆ ಬೀಸಲಾಗಿದೆ.ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗುವ ಪ್ರಕ್ರಿಯೆ ನಡೆಯುತ್ತಿದೆ.ಈ ಘಟನೆಯಿಂದಾಗಿ ಸ್ಥಳೀಯ ಕಾಲೇಜು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಶೀಘ್ರವೇ ಆರೋಪಿಗಳನ್ನು ಬಂಧಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.