ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಸಾಬೀತು- ಅಪರಾಧಿಗೆ 5 ವರ್ಷ ಜೈಲು, ₹35 ಸಾವಿರ ದಂಡ..!
Friday, August 21, 2026
ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐದು ವರ್ಷಗಳ ಸಾಧಾರಣ ಕಾರಾಗೃಹ ಶಿಕ್ಷೆ ಹಾಗೂ ₹35 ಸಾವಿರ ದಂಡ ವಿಧಿಸಿದೆ.
ಕಡಬ ಕುದ್ಮಾರು ನಿವಾಸಿ ಅಬ್ದುಲ್ಲಾ (64) ಶಿಕ್ಷೆಗೊಳಗಾದ ಅಪರಾಧಿ.
ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಐಪಿಸಿ ಕಲಂ 354(A1), 506 ಹಾಗೂ ಪೊಕ್ಸೊ ಕಾಯ್ದೆ-2012ರ ಕಲಂ 8ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುಮಂಗಲ ಚಕಲಬ್ಬಿ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಐದು ವರ್ಷಗಳ ಸಾಧಾರಣ ಕಾರಾಗೃಹ ಶಿಕ್ಷೆ ಹಾಗೂ ₹35 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಆರು ತಿಂಗಳ ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ.
ಪ್ರಕರಣದ ತನಿಖಾಧಿಕಾರಿಯಾಗಿದ್ದ ಹಾಗೂ ಅಂದಿನ ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರ ವಿಶೇಷ ಅಭಿಯೋಜಕ ಪುಷ್ಪರಾಜ್ ವಾದ ಮಂಡಿಸಿದ್ದರು.