ಶಿಮ್ಲ :ಭೀಕರ ರಸ್ತೆ ಅಪಘಾತ; ಖಾಸಗಿ ಬಸ್ ಪಲ್ಟಿಯಾಗಿ ಚಾಲಕ, ಕಂಡಕ್ಟರ್ ಸೇರಿ 8 ಮಂದಿ ದುರ್ಮರಣ..!!

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್‌ವೊಂದು ಪಲ್ಟಿಯಾದ ಪರಿಣಾಮ ಚಾಲಕ ಹಾಗೂ ಕಂಡಕ್ಟರ್ ಸೇರಿದಂತೆ 8 ಪ್ರಯಾಣಿಕರು ದುರ್ಮರಣಕ್ಕೀಡಾಗಿದ್ದು, ದುರಂತದಲ್ಲಿ 10 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.
ಬೈರಾಗರ್‌ನಿಂದ ಚಂಬಾಗೆ ತೆರಳುತ್ತಿದ್ದ ಖಾಸಗಿ ಬಸ್, ಬೈರಾಗರ್-ಟಿಸ್ಸಾ ಮಾರ್ಗದ ದೇವಿಕೋಥಿ ವಲಯದ ಚಲುಂಜ್ ಮೋರ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯ ವೇಳೆಯಲ್ಲಿ ಬಸ್‌ನಲ್ಲಿ ಒಟ್ಟು 18 ಮಂದಿ ಪ್ರಯಾಣಿಸುತ್ತಿದ್ದರು. ಮೇಲಿನ ರಸ್ತೆಯಿಂದ ಆಯತಪ್ಪಿ ಕೆಳಗಿನ ರಸ್ತೆಗೆ ಬಿದ್ದ ರಭಸಕ್ಕೆ ಕೆಲ ಪ್ರಯಾಣಿಕರು ಬಸ್‌ನ ಅಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸ್ಥಳೀಯ ನಿವಾಸಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಎನ್‌ಡಿಆರ್‌ಎಫ್, ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಗಾಯಾಳುಗಳನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಲಾಗಿದೆ.
ಘಟನೆಗೆ ತೀವ್ರ ಕಂಬನಿ ಮಿಡಿದಿರುವ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ತಕ್ಷಣವೇ ಉಚಿತ ಹಾಗೂ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.
ಇನ್ನೊಂದೆಡೆ, ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ 185ಕ್ಕೂ ಹೆಚ್ಚು ರಸ್ತೆಗಳು ಸಂಚಾರಕ್ಕೆ ಸ್ಥಗಿತಗೊಂಡಿವೆ. ಶಿಮ್ಲಾ ಹವಾಮಾನ ಕೇಂದ್ರವು ಆ ಆಗಸ್ಟ್ 10 ಮತ್ತು 11 ರಂದು ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮತ್ತೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಿದೆ.