ಬೆಂಗಳೂರು :ವಂದೇ ಮಾತರಂ ಗಾಯನ; ಕೇಂದ್ರದ ನಿಲುವಿಗೆ ಕರ್ನಾಟಕ ಸರ್ಕಾರದ ವಿಭಿನ್ನ ಆದೇಶ.ಸರ್ಕಾರಿ ಕಾರ್ಯಕ್ರಮಗಳಲ್ಲಿ ಮೊದಲ 2 ಚರಣಗಳ ಗಾಯನಕ್ಕೆ ಮಾತ್ರ ಸೂಚನೆ...!
Thursday, September 10, 2026
ಬೆಂಗಳೂರು: ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ವಿಭಿನ್ನ ನಿಲುವು ಕೈಗೊಂಡಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ ಆವೃತ್ತಿಯ ಬದಲಾಗಿ, ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಸಮಾರಂಭಗಳ ಸ್ವರೂಪಕ್ಕೆ ಅನುಗುಣವಾಗಿ ಏಕರೂಪತೆ, ಸೂಕ್ತ ಶಿಷ್ಟಾಚಾರ ಹಾಗೂ ಗೀತೆಗೆ ಅಗತ್ಯ ಗೌರವವನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅತ್ಯುನ್ನತ ಮಟ್ಟದ ಕಾರ್ಯಕ್ರಮಗಳಿಗೆ ವಿನಾಯಿತಿ
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಸಂದೀಪ್ ಬಿ.ಕೆ. ಅವರು ಹೊರಡಿಸಿರುವ ಆದೇಶದಂತೆ, ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ರಾಜ್ಯಪಾಲರು ಭಾಗವಹಿಸುವ ಅತ್ಯುನ್ನತ ಮಟ್ಟದ ಕಾರ್ಯಕ್ರಮಗಳನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ಇತರ ಎಲ್ಲಾ ಸಾಂಸ್ಥಿಕ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಸೂಚಿಸಲಾಗಿದೆ.
ಆದೇಶದಲ್ಲಿ ವಂದೇ ಮಾತರಂ ಗೀತೆಯು ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ದೇಶದ ಜನರಲ್ಲಿ ರಾಷ್ಟ್ರೀಯತೆ, ಏಕತೆ ಹಾಗೂ ದೇಶಭಕ್ತಿಯ ಭಾವನೆ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಉಲ್ಲೇಖಿಸಲಾಗಿದೆ.
ಕೇಂದ್ರ ಗೃಹ ಸಚಿವಾಲಯವು ವಂದೇ ಮಾತರಂ ಗೀತೆಯ ವಿವಿಧ ಆವೃತ್ತಿಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅದರ ಗಾಯನ ಮತ್ತು ವಾದನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಹೊರಡಿಸಿರುವುದನ್ನೂ ರಾಜ್ಯ ಸರ್ಕಾರದ ಆದೇಶದಲ್ಲಿ ಪ್ರಸ್ತಾಪಿಸಲಾಗಿದೆ. ಸಾಮೂಹಿಕ ಗಾಯನ ಮತ್ತು ವಾದನದ ಸಂದರ್ಭಗಳನ್ನು ಪ್ರತ್ಯೇಕವಾಗಿ ನಿರ್ದಿಷ್ಟಪಡಿಸಲಾಗಿದೆ.
ಕಾಂಗ್ರೆಸ್‌ನ ಹಿಂದಿನ ನಿಲುವಿನ ಬೆನ್ನಲ್ಲೇ ನಿರ್ಧಾರ
ವಂದೇ ಮಾತರಂ ಗೀತೆಯ ಚರಣಗಳ ಗಾಯನದ ವಿಚಾರ ರಾಜಕೀಯವಾಗಿಯೂ ಚರ್ಚೆಗೆ ಗ್ರಾಸವಾಗಿದೆ. 1937ರ ಕಾಂಗ್ರೆಸ್ ನಿರ್ಣಯದ ಹಿನ್ನೆಲೆಯಲ್ಲಿ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವುದು ಸೂಕ್ತ ಎಂಬ ಅಭಿಪ್ರಾಯ ಕಾಂಗ್ರೆಸ್ ವಲಯದಲ್ಲಿ ಈ ಹಿಂದೆಯೇ ವ್ಯಕ್ತವಾಗಿತ್ತು.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ವಂದೇ ಮಾತರಂ ಗೀತೆಯ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಹಾಡಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ರಾಜಕೀಯ ಹಾಗೂ ಸೈದ್ಧಾಂತಿಕ ಚರ್ಚೆಗಳ ನಡುವೆಯೇ ರಾಜ್ಯ ಸರ್ಕಾರ ತನ್ನ ಸರ್ಕಾರಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಮೊದಲ ಎರಡು ಚರಣಗಳ ಗಾಯನಕ್ಕೆ ಆದ್ಯತೆ ನೀಡಿರುವುದು ಇದೀಗ ಗಮನ ಸೆಳೆದಿದೆ.
ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಕೆಲವರು ಕೇಂದ್ರದ ನಿಲುವಿಗೆ ವಿಭಿನ್ನವಾದ ರಾಜ್ಯದ ನಿಲುವು ಎಂದು ವಿಶ್ಲೇಷಿಸುತ್ತಿದ್ದರೆ, ಮತ್ತೊಂದೆಡೆ ಕಾರ್ಯಕ್ರಮಗಳ ಶಿಷ್ಟಾಚಾರ ಹಾಗೂ ವಿವಿಧ ಸಮುದಾಯಗಳ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಕೈಗೊಂಡ ಆಡಳಿತಾತ್ಮಕ ನಿರ್ಧಾರ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಲಾಗುತ್ತಿದೆ.