ಬೆಂಗಳೂರು :ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಬೆಂಕಿ: ಚಾಲಕ, ನಿರ್ವಾಹಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ..!
Saturday, October 31, 2026
ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ಬೆಳಗ್ಗೆ ಕೋರಮಂಗಲದ ಸೈಂಟ್ ಜಾನ್ಸ್ ಆಸ್ಪತ್ರೆ ಸಮೀಪದ ಚೆಕ್‌ಪೋಸ್ಟ್ ಬಳಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲ.
ಪ್ರಯಾಣಿಕರೊಂದಿಗೆ ಸಂಚರಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದೆ. ತಕ್ಷಣ ಎಚ್ಚೆತ್ತ ಚಾಲಕ ಬಸ್ನ್ನು ರಸ್ತೆ ಬದಿ ಸುರಕ್ಷಿತವಾಗಿ ನಿಲ್ಲಿಸಿ, ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ನಂತರ ಬಸ್‌ನಲ್ಲಿದ್ದ ಅಗ್ನಿಶಾಮಕ ಉಪಕರಣ ಬಳಸಿ ಚಾಲಕ ಹಾಗೂ ನಿರ್ವಾಹಕರೇ ಬೆಂಕಿಯನ್ನು ನಿಯಂತ್ರಿಸಲು ಯತ್ನಿಸಿದ್ದಾರೆ. ಮತ್ತು ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ ಚಾಲಕ ಹಾಗೂ ನಿರ್ವಾಹಕನ ಸಮಯಪ್ರಜ್ಞೆಯಿಂದ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಬಿಎಂಟಿಸಿಯ ಯಾಂತ್ರಿಕ ಇಂಜಿನಿಯರಿಂಗ್ ವಿಭಾಗದ ಪ್ರಾಥಮಿಕ ಪರಿಶೀಲನೆ ವೇಳೆ ಕಂಡುಬಂದಿದೆ. ಆದಾಗ್ಯೂ, ಬೆಂಕಿ ಅವಘಡಕ್ಕೆ ನಿಖರವಾದ ಕಾರಣವೇನು ಎಂಬುದು ಇನ್ನೂ ದೃಢಪಟ್ಟಿಲ್ಲ. ಈ ಸಂಬಂಧ ಬಸ್ ತಯಾರಿಕಾ ಸಂಸ್ಥೆಯಾದ ಐಷರ್ ಕಂಪನಿಯ ಅಧಿಕಾರಿಗಳನ್ನು ಸಂಪರ್ಕಿಸಲಾಗಿದ್ದು, ನವೆಂಬರ್ 2ರಂದು ಕಂಪನಿಯ ತಾಂತ್ರಿಕ ತಂಡ ಹಾಗೂ ಬಿಎಂಟಿಸಿಯ ಇಂಜಿನಿಯರಿಂಗ್ ತಂಡಗಳು ಜಂಟಿಯಾಗಿ ಸ್ಥಳ ಹಾಗೂ ಬಸ್‌ಅನ್ನು ಪರಿಶೀಲನೆ ನಡೆಸಲಿವೆ. ಆ ವರದಿಯ ಆಧಾರದ ಮೇಲೆ ಮುಂದಿನ ಅಗತ್ಯ ತಿದ್ದುಪಡಿ ಹಾಗೂ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಬಿಎಂಟಿಸಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.