ಕೊಡಗು :ಕೆರೆಯಲ್ಲಿ ಕಾರು ಮುಳುಗಿ ಪುಟ್ಟ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ದುರ್ಮರಣ..!kodagu car dump death
ಸಿದ್ದಾಪುರ (ಕೊಡಗು): ಕೆರೆಯಲ್ಲಿ ಕಾರು ಮುಳುಗಿ ಪುಟ್ಟ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಸಿದ್ದಾಪುರ ಸಮೀಪದ ಬಾಣಂಗಾಲ ಗ್ರಾಮದಲ್ಲಿ ಮಂಗಳವಾರ (ಅ.20) ರಾತ್ರಿ ನಡೆದಿದೆ.
ಸಿದ್ದಾಪುರ ಹೈಸ್ಕೂಲ್ ಪೈಸಾರಿ ನಿವಾಸಿ, ಬಾಣಂಗಾಲ ಗ್ರಾಮದ ಎಲ್ಕ್ ಹಿಲ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ವಿಜೇಶ್ (36), ಅವರ ಪತ್ನಿ ಪಮಿತ (34) ಹಾಗೂ ನಾಲ್ಕು ವರ್ಷದ ಮಗಳು ಲಿಯಾ ಮೃತಪಟ್ಟ ದುರ್ದೈವಿಗಳು.
ಮಂಗಳವಾರ ರಾತ್ರಿ ಸಿದ್ದಾಪುರದಿಂದ ಬಾಣಂಗಾಲ ಗ್ರಾಮದ ತಮ್ಮ ಮನೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಾರ್ಗಮಧ್ಯೆ ಕಾರು ನಿಯಂತ್ರಣ ತಪ್ಪಿ ಬಾಣಂಗಾಲ ಕೆರೆಗೆ ಉರುಳಿ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ದಂಪತಿ ಹಾಗೂ ಮಗು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬುಧವಾರ ಬೆಳಗ್ಗೆ ತೋಟದ ಕಾರ್ಮಿಕರು ಕೆರೆಯಲ್ಲಿ ಕಾರು ಮುಳುಗಿರುವುದನ್ನು ಗಮನಿಸಿದ್ದು, ಬಳಿಕ ಕಾರಿನಲ್ಲಿದ್ದ ಮೂವರ ಮೃತದೇಹಗಳನ್ನು ಕೆರೆಯಿಂದ ಹೊರತೆಗೆಯಲಾಗಿದೆ.
ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಸ್ಥಳೀಯರಲ್ಲಿ ತೀವ್ರ ದುಃಖ ಮೂಡಿಸಿದೆ.