BREAKING
ದಕ್ಷಿಣ ಕನ್ನಡ

ಪತ್ನಿಯನ್ನು ಕೊಲೆಗೈದು ಅಸ್ವಾಭಾವಿಕ ಸಾವು ಎಂದು ಬಿಂಬಿಸಲು ಯತ್ನಿಸಿದ ಪತಿಗೆ 5 ವರ್ಷ ಜೈಲು ಶಿಕ್ಷೆ! ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ನೆರೆಮನೆಯವರಿಗೆ ತಿಳಿಸಿದ್ದ ಪತಿ; ನ್ಯಾಯಾಲಯದಿಂದ ಶಿಕ್ಷೆ ಪ್ರಕಟ

ವಿಟ್ಲ:ಪತ್ನಿಯನ್ನು ಕೊಲೆಗೈದು, ಆಕೆಯ ಸಾವನ್ನು ಹೃದಯಾಘಾತದಿಂದ ಸಂಭವಿಸಿದ ಅಸ್ವಾಭಾವಿಕ ಸಾವು ಎಂದು ಬಿಂಬಿಸಲು ಯತ್ನಿಸಿದ ಪತಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐದು ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

2024ರ ಡಿಸೆಂಬರ್ 11ರಂದು ರಾತ್ರಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ಈ ಘಟನೆ ನಡೆದಿತ್ತು. ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ ಎಂದು ಆಕೆಯ ಪತಿ ಸಂಜೀವ ನಾಯ್ಕ ನೆರೆಮನೆಯವರಿಗೆ ತಿಳಿಸಿದ್ದ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.

ಮೃತದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಬದಲು ಕೊಲೆ ಪ್ರಕರಣವಾಗಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 103(1)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ತನಿಖಾಧಿಕಾರಿ ಹಾಗೂ ಪೊಲೀಸ್ ನಿರೀಕ್ಷಕ ನಾಗರಾಜ್ ಎಚ್.ಇ. ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಮೃತ ಮಹಿಳೆಯ ಪತಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ.

ಶಿಕ್ಷೆಯ ವಿವರ:

- ಭಾರತೀಯ ನ್ಯಾಯ ಸಂಹಿತೆ (BNS) 2023ರ ಸೆಕ್ಷನ್ 105ರ ಭಾಗ 2ರ ಅಡಿಯಲ್ಲಿ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು.

- BNS ಸೆಕ್ಷನ್ 240ರ ಅಡಿಯಲ್ಲಿ 6 ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಲಾಗಿದೆ.

ಪ್ರಕರಣದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ್ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

📢 ಡೇ ಕರ್ನಾಟಕ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!