ಬೆಂಗಳೂರು: ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳು ಹಾಗೂ ಕಾರ್ಪೊರೇಟ್ ಕಂಪನಿಗಳಿಗೆ ದತ್ತು ನೀಡುವ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಮೂರನೇ ದಿನವೂ ಮುಂದುವರಿದಿದೆ. ಮುಖ್ಯಮಂತ್ರಿಗಳೊಂದಿಗೆ ನೇರ ಸಭೆ ನಡೆಸಿ, ಬೇಡಿಕೆಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಲಿಖಿತ ಭರವಸೆ ದೊರೆಯುವವರೆಗೂ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.**
ನವೆಂಬರ್ 26ರಿಂದ ಆರಂಭಗೊಂಡಿರುವ ಈ ಅಹೋರಾತ್ರಿ ಸತ್ಯಾಗ್ರಹದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಕ್ಕೂ ಹೆಚ್ಚು ಕೂಲಿ ಕಾರ್ಮಿಕ ಮಹಿಳೆಯರು, ವಿದ್ಯಾರ್ಥಿಗಳು, ಪೋಷಕರು, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಪದಾಧಿಕಾರಿಗಳು ಹಾಗೂ ಶಿಕ್ಷಣ ಹಕ್ಕು ಹೋರಾಟಗಾರರು ಭಾಗವಹಿಸಿದ್ದಾರೆ.
ಶಿಕ್ಷಣ ಹಕ್ಕು ಕಾಯಿದೆ (RTE) ಸಮರ್ಪಕವಾಗಿ ಜಾರಿಗೊಳಿಸಬೇಕು ಮತ್ತು ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ನೀತಿಯನ್ನು ತಕ್ಷಣವೇ ಕೈಬಿಡಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಶಿಕ್ಷಣ ತಜ್ಞ ಡಾ. ನಿರಂಜನಾರಾಧ್ಯ ಅವರು, ಕಳೆದ ಮೂರು ದಿನಗಳಿಂದ ಕೂಲಿ ಕೆಲಸ ಮಾಡುವ ಮಹಿಳೆಯರು ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಪಂದಿಸದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ, ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಸರ್ಕಾರಿ ಶಾಲೆಗಳಿಗೆ ಅಗತ್ಯ ಶಿಕ್ಷಕರ ನೇಮಕಾತಿ, ಮೂಲಸೌಕರ್ಯ ಮತ್ತು ಅನುದಾನ ಒದಗಿಸುವ ಬದಲು ಖಾಸಗಿ ಸಂಸ್ಥೆಗಳು ಹಾಗೂ ಕಾರ್ಪೊರೇಟ್ ಕಂಪನಿಗಳ ದತ್ತು ಅಥವಾ ಮೆಂಟರ್ಶಿಪ್ಗೆ ನೀಡುವ ನೀತಿಯು ಸಾರ್ವಜನಿಕ ಶಿಕ್ಷಣದ ಆಶಯಕ್ಕೆ ವಿರುದ್ಧವಾಗಿದೆ ಎಂದು ಹೋರಾಟಗಾರರು ಆಕ್ಷೇಪಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಸಚಿವ ಅಜಯ್ ಸಿಂಗ್ ಭೇಟಿ
ಈ ನಡುವೆ ಸಣ್ಣ ನೀರಾವರಿ ಸಚಿವ ಡಾ. ಅಜಯ್ ಸಿಂಗ್ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಹೋರಾಟಗಾರರೊಂದಿಗೆ ಮಾತುಕತೆ ನಡೆಸಿದರು. ಸರ್ಕಾರ ಹೋರಾಟಗಾರರ ಪರವಾಗಿದ್ದು, ಅವರ ಬೇಡಿಕೆಗಳನ್ನು ಈಡೇರಿಸಲು ಸಿದ್ಧವಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲು ಶೀಘ್ರದಲ್ಲೇ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಸಚಿವರ ಭರವಸೆಯನ್ನು ಸ್ವಾಗತಿಸಿದ ಪ್ರತಿಭಟನಾಕಾರರು, ಕೇವಲ ಮೌಖಿಕ ಭರವಸೆಯಿಂದ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮುಖ್ಯಮಂತ್ರಿಗಳೊಂದಿಗೆ ನೇರ ಸಭೆ ನಡೆದು ಬೇಡಿಕೆಗಳ ಕುರಿತು ಲಿಖಿತ ಭರವಸೆ ದೊರೆಯುವವರೆಗೂ ಧರಣಿ ಮುಂದುವರಿಸುವುದಾಗಿ ಘೋಷಿಸಿದರು.
ಹೋರಾಟಗಾರರ ಪ್ರಮುಖ ಬೇಡಿಕೆಗಳು
1. ರಾಜ್ಯದ ಪ್ರತಿಯೊಂದು ಮಗುವಿಗೂ ಶಿಕ್ಷಣದ ಹಕ್ಕು ಖಚಿತಪಡಿಸಲು ಶಿಕ್ಷಣ ಹಕ್ಕು ಕಾಯಿದೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು.
2. ಸರ್ಕಾರಿ ಶಾಲೆಗಳಿಗೆ ಅಗತ್ಯ ಶಿಕ್ಷಕರ ನೇಮಕಾತಿ, ಮೂಲಸೌಕರ್ಯ ಮತ್ತು ಅನುದಾನ ಒದಗಿಸಬೇಕು.
3. ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳು ಹಾಗೂ ಕಾರ್ಪೊರೇಟ್ ಕಂಪನಿಗಳಿಗೆ ದತ್ತು ಅಥವಾ ಮೆಂಟರ್ಶಿಪ್ಗೆ ನೀಡುವ ಯೋಜನೆಯನ್ನು ತಕ್ಷಣವೇ ರದ್ದುಗೊಳಿಸಬೇಕು.
4. ಸಾರ್ವಜನಿಕ ಶಿಕ್ಷಣದ ಆಡಳಿತ ಮತ್ತು ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು.
ಶಿಕ್ಷಣವು ದಾನವಲ್ಲ, ಪ್ರತಿಯೊಂದು ಮಗುವಿನ ಸಂವಿಧಾನಬದ್ಧ ಹಕ್ಕು. ಸರ್ಕಾರಿ ಶಾಲೆಗಳನ್ನು ಸರ್ಕಾರವೇ ಬಲಪಡಿಸಬೇಕು. ಈ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ ಎಚ್ಚರಿಸಿದೆ.
