BREAKING
ದಕ್ಷಿಣ ಕನ್ನಡ

ಮಂಗಳೂರು: ಕಣಚೂರು ಮೆಡಿಕಲ್ ಕಾಲೇಜಿನಲ್ಲೇ ವಿದ್ಯಾರ್ಥಿನಿ ಅಪಹರಣ! ಪ್ರೀತಿಯ ವಿಚಾರಕ್ಕೆ ಕುಟುಂಬಸ್ಥರಿಂದಲೇ ಕಿಡ್ನಾಪ್ ಆರೋಪ ತನಿಖೆಗೆ ಪೊಲೀಸ್ ಕಮಿಷನರ್ ಆದೇಶ


ಮಂಗಳೂರು: ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕರೆದೊಯ್ದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಾಲೇಜು ಆವರಣದಿಂದಲೇ ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಪ್ರೀತಿಯೇ ಅಪಹರಣಕ್ಕೆ ಕಾರಣವೇ?

ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಹಿಂದು ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಆಕೆಯ ಕುಟುಂಬದ ಸದಸ್ಯರು ಕಾಲೇಜಿಗೆ ಬಂದು ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗುರುವಾರ ಸಂಜೆ ನಡೆದ ಈ ಘಟನೆಯ ವಿಡಿಯೋದಲ್ಲಿ ಕೆಲವರು ವಿದ್ಯಾರ್ಥಿನಿಯನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ಕೂರಿಸುವ ದೃಶ್ಯ ಕಂಡುಬಂದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ವಯಸ್ಕಳ ನಿರ್ಧಾರಕ್ಕೆ ಕಾನೂನಿನ ರಕ್ಷಣೆ

ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ, ವಯಸ್ಕರಾದ ಪ್ರತಿಯೊಬ್ಬರಿಗೂ ತಮ್ಮ ಜೀವನದ ನಿರ್ಧಾರಗಳನ್ನು ಸ್ವತಂತ್ರವಾಗಿ ತೆಗೆದುಕೊಳ್ಳುವ ಹಕ್ಕಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಯುವತಿ ವಯಸ್ಕಳಾಗಿದ್ದರೆ, ಆಕೆ ಯಾರೊಂದಿಗೆ ಇರಬೇಕು, ಎಲ್ಲಿ ವಾಸಿಸಬೇಕು ಎಂಬುದನ್ನು ಸ್ವತಃ ನಿರ್ಧರಿಸುವ ಸ್ವಾತಂತ್ರ್ಯ ಹೊಂದಿದ್ದಾಳೆ. ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಕರೆದೊಯ್ಯುವುದು ಕಾನೂನುಬಾಹಿರವಾಗಬಹುದು ಎಂದು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿ ತನಿಖೆ ನಡೆಸಲು ಸೂಚನೆ

ಘಟನೆ ನಡೆದ ತಕ್ಷಣ ಪೊಲೀಸರಿಗೆ ಮಾಹಿತಿ ದೊರೆತಿದ್ದರೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬಹುದಿತ್ತು. ಇದೀಗ ಪ್ರಕರಣದ ಕುರಿತು ತನಿಖೆ ನಡೆಸಿ, ವಿದ್ಯಾರ್ಥಿನಿಯನ್ನು ಪತ್ತೆಹಚ್ಚುವಂತೆ ಸೂಚಿಸಲಾಗಿದೆ. ಆಕೆಯ ಇಚ್ಛೆಗೆ ವಿರುದ್ಧವಾಗಿ ಕರೆದೊಯ್ದಿರುವುದು ದೃಢಪಟ್ಟಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ವಿದ್ಯಾರ್ಥಿನಿಯ ಸುರಕ್ಷತೆ ಹಾಗೂ ಆಕೆಯ ಸ್ವತಂತ್ರ ನಿರ್ಧಾರದ ಹಕ್ಕು ಈಗ ಪ್ರಮುಖವಾಗಿದ್ದು, ಪೊಲೀಸ್ ತನಿಖೆಯ ಬಳಿಕ ಘಟನೆಯ ಸಂಪೂರ್ಣ ಸತ್ಯಾಂಶ ಹೊರಬರಬೇಕಿದೆ.

📢 ಡೇ ಕರ್ನಾಟಕ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!